Colossians - Chapter 1
Holy Bible

1 : ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -
2 : ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!
3 : ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ.
4 : ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
5 : ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.
6 : ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.
7 : ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.
8 : ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.
9 : ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜಾÐನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.
10 : ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.
11 : ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.
12 : ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ಥ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.
13 : ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.
14 : ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.
15 : ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ.
16 : ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.
17 : ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.
18 : ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.
19 : ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವ ಸಂಪೂರ್ಣತೆಯನು.
20 : ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.
21 : ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.
22 : ಈಗಲಾದರೋ ಯೇಸುಕ್ರಿಸ್ತರ ದೈಹಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.
23 : ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.
24 : ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.
25 : ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ
26 : ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯವನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.
27 : ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತ ಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.
28 : ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿ ಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.
29 : ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.

Holydivine