Ephesians - Chapter 2
Holy Bible

1 : ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.
2 : ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.
3 : ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.
4 : ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,
5 : ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).
6 : ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.
7 : ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.
8 : ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.
9 : ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.
10 : ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.
11 : ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.
12 : ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.
13 : ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.
14 : ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.
15 : ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.
16 : ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.
17 : ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.
18 ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾ ರ್ಗವಾಯಿತು.
19 : ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.
20 : ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯ ಮೂಲೆಗಲ್ಲು.
21 : ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.
22 : ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.

Holydivine