Luke - Chapter 1
Holy Bible

1 : ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.
2 : ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.
3 : ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.
4 : ನಿನಗೆ ಉಪದೇಶಿಸಲಾಗಿರುವ ವಿಷಯಗಳು ಸತ್ಯವಾದುವೆಂದು ಇದರಿಂದ ನಿನಗೆ ಮನದಟ್ಟಾಗುವುದು. ಸ್ನಾನಿಕ ಯೊವಾನ್ನನ ಜನನ
5 : ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.
6 : ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿ ನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.
7 : ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.
8 : ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.
9 : ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ
10 : ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.
11 : ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.
12 : ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು.
13 : ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡು ಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.
14 : ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹು ಜನಕ್ಕೆ ಸಂತಸವನ್ನು ತರುವುದು.
15 : ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.
16 : ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.
17 : ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯ ಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.
18 : ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.
19 : ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.
20 : ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆ ಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.
21 : ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.
22 : ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆ ಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.
23 : ತನ್ನ ಯಾಜಕ ಸೇವಾ ಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು.
24 : ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘
25 : ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು.
26 : ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು.
27 : ಆಕೆಗೆ ದಾವೀದರಸನ ವಂಶಜನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.
28 : ದೇವದೂತನು ಆಕೆಯ ಬಳಿಗೆ ಬಂದು “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.
29 : ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.
30 : ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;
31 : ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;
32 : ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.
33 : ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.
34 : ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.
35 : ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.
36 : ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು: ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.
37 : ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.
38 : ಆಗ ಮರಿಯಳು, “ಇಗೋ, ನಾನು ದೇವರ ಸೇವಕಿ, ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು. ಮರಿಯ - ಎಲಿಜಬೇತಳ ಭೇಟಿ
39 : ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು.
40 : ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.
41 : ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿದ್ದ ಶಿಶು ನಲಿದಾಡಿತು; ಎಲಿಜಬೇತಳು ಪವಿತ್ರಾತ್ಮಭರಿತಳಾಗಿ
42 : ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!
43 : ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!
44 : ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!
45 : ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.” ಮರಿಯಳ ಸ್ತುತಿಗೀತೆ
46 : ಆಗ ಹೀಗೆಂದು ಮರಿಯಳು ಹೊಗಳಿದಳು:
47 : “ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ ! ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ !!
48 : ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ ! ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವ ಜನಾಂಗ !!
49 : ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ ! ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ !!
50 : ಆತನಲ್ಲಿ ಭಯಭಕ್ತಿಯುಳ್ಳವರಿಗೆ ! ಆತನ ಪ್ರೀತಿ ತಲತಲಾಂತರದವರೆಗೆ !!
51 : ಗರ್ವಹೃದಯಿಗಳನಾತ ಚದರಿಸಿರುವನು ! ಪ್ರದರ್ಶಿಸಿರುವನು ತನ್ನ ಬಾಹುಬಲವನು !!
52 : ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು ! ಏರಿಸಿರುವನು ಉನ್ನತಿಗೆ ದೀನದಲಿತರನು !!
53 : ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ ! ಹೊರದೂಡಿರುವನು ಸಿರಿವಂತರನು ಬರೀಗೈಯಲಿ !!
54 : ನೆರವಾದನು ತನ್ನ ದಾಸ ಇಸ್ರಯೇಲನಿಗೆ ! ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ !!
55 : ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ ! ಅವನ ಸಂತತಿಗೆ, ಯುಗಯುಗಾಂತರದವರೆಗೆ !!
56 : ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು. ಸ್ನಾನಿಕ ಯೊವಾನ್ನನ ಜನನ
57 : ದಿನ ತುಂಬಿದಾಗ ಎಲಿಜಬೇತಳು ಗಂಡು ಮಗುವಿಗೆ ಜನ್ಮವಿತ್ತಳು.
58 : ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.
59 : ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು.
60 : ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು.
61 : ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ,
62 : “ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.
63 : ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು.
64 : ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.
65 : ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.
66 : ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಆ ಮಗುವಿನ ಮೇಲಿತ್ತು. ಜಕರೀಯನ ಪ್ರವಾದನೆ
67 : ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು :
68 : ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ! ತಾನಾಗಿ ಬಂದು ತನ್ನ ಪ್ರಜೆಯನು ಬಿಡುಗಡೆ ಮಾಡಿದಾತನಿಗೆ !!
69 : ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು ! ನಮಗೊಬ್ಬ ಶಕ್ತಿಯುತ ಮುಕ್ತಿದಾತನನು !!
70 : ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ ! ಅರುಹಿಸಿರುವನು ಇಂತೆಂದು ನಮಗೆ:!!
71 : ‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ !!
72 : ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು ! ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು !!
73 : ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ !
74 : ನಮಗಿತ್ತಿರುವನು ಶತ್ರುಗಳಿಂದ ರಕ್ಷಿಸುವನೆಂಬ ಅಭಯ !!
75 : ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ ! ಆತನ ಸನ್ನಿಧಿಯಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ !!
76 : ಸುಕುಮಾರಾ, ನೀನೆಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ !
77 : ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ !! ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ ! ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ !!
78 : ಕೃಪಾಸಾಗರ, ದಯಾಮಯ ನಮ್ಮ ದೇವನು ! ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು !!
79 : ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು ! ನಮ್ಮ ಕಾಲುಗಳನ್ನೂರಿಸಿ ನಡೆಸಲು ಶಾಂತಿಪಥದೊಳು !!
80 : ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು. ಕ್ರಿಸ್ತೇಸುವಿನ ಜನನ (ಮತ್ತಾ. 1.18-25)

Holydivine