Titus - Chapter 2
Holy Bible

1 : ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು.
2 : ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.
3 : ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು; ಸದ್ಬೋಧಕಿಯರಾಗಿರಬೇಕೆಂದು ವಿಧಿಸು.
4 : ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.
5 : ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧ ಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.
6 : ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.
7 : ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ.
8 : ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡು ಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.
9 : ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.
10 : ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.
11 : ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.
12 : ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ.
13 : ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.
14 : ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟರು.
15 : ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.

Holydivine