Mathew - Chapter 13
Holy Bible

1 : ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.
2 : ಜನರು ತಂಡೋಪತಂಡವಾಗಿ ಕೂಡಿ ಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು.
3 : ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:
4 : "ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.
5 : ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.
6 : ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.
7 : ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿ ಬಿಟ್ಟವು.
8 : ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು, ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.
9 : ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ," ಎಂದು ಒತ್ತಿ ಹೇಳಿದರು.
10 : ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, "ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?" ಎಂದು ಕೇಳಿದರು.
11 : ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.
12 : ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.
13 : ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.
14 : ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ: "ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು.
15 : ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು."
16 : "ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.
17 : ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.
18 : "ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:
19 : ಒಬ್ಬನು ಶ್ರೀ ಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆ ಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.
20 : ಬೇರೊಬ್ಬನು ಈ ಸಂದೇಶವನ್ನು ಕೇಳಿದಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.
21 : ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟ ಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.
22 : ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.
23 : ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲ ಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ," ಎಂದರು.
24 : ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.
25 : ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.
26 : ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.
27 : ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, "ಸ್ವಾವಿೂ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ, ಅದೆಲ್ಲಿಂದ ಬಂತು?" ಎಂದರು.
28 : ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತು ಹಾಕೋಣವೇ?’ ಎಂದರು ಆಳುಗಳು,
29 : ಅದಕ್ಕೆ ಯಜಮಾನ ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತು ಬಿಟ್ಟೀರಿ.
30 : ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟು ಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ".
31 : ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: "ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡುಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.
32 : ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಿಸುತ್ತವೆ."
33 : ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: "ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು." ಸಾಮತಿಗಳ ಸುರಿಮಳೆಯೇಕೆ? (ಮಾರ್ಕ 4:33-34)
34 : ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.
35 : “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು" ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಕಳೆಗಳ ಸಾಮತಿಗೆ ಅರ್ಥ
36 : ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, "ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ," ಎಂದು ಕೇಳಿಕೊಂಡರು.
37 : ಅದಕ್ಕೆ ಯೇಸು, "ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು;
38 : ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.
39 : ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ, ಕೊಯ್ಲುಗಾರರೇ ದೇವದೂತರು.
40 : ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟು ಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.
41 : ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ
42 : ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು.
43 : ಸದ್ದರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ! ಹೂಳಿಟ್ಟ ನಿಧಿ
44 : "ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡು ಕೊಂಡುಬಿಡುತ್ತಾನೆ.
45 : "ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.
46 : ಅನಘ್ರ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.
47 : "ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನುಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.
48 : ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕಳಿತುಕೊಂಡು, ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.
49 : ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.
50 : ಅಲ್ಲಿ ಅವರು ಕಟಕಟನೆ ಹಲ್ಲು ಕಡಿದುಕೊಂಡು ಗೋಳಾಡುವರು.
51 : "ಇದೆಲ್ಲ ನಿಮಗೆ ಅರ್ಥವಾಯಿತೇ?" ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು "ಅರ್ಥವಾಯಿತು" ಎಂದರು.
52 : ಆಗ ಯೇಸು, "ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ," ಎಂದರು.
53 : ಈ ಸಾಮತಿಗಳನ್ನು ಹೇಳಿಯಾದ ಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟು ಹೋದರು.
54 : ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, "ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?
55 : ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?
56 : ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?" ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.
57 : ಅವರಿಗೆ ಯೇಸು, "ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು," ಎಂದು ಹೇಳಿದರು.
58 : ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತ ಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.

Holydivine