Mathew - Chapter 18
Holy Bible

1 : ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, "ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?" ಎಂದು ಕೇಳಿದರು.
2 : ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು:
3 : “ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.
4 : ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.
5 : ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ."
6 : "ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
7 : ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!
8 : ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರ ಜೀವವನ್ನು ಪಡೆಯುವುದೇ ನಿನಗೆ ಲೇಸು.
9 : ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರ ಜೀವವನ್ನು ಪಡೆ. ಅದೇ ನಿನಗೆ ಲೇಸು.
10 : "ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.
11 : ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.
12 : “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ, ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
13 : ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಈ ತೊಂಭತ್ತೊಂಭತ್ತು ಕುರಿಗಳಿಗಿಂತ ಸಿಕ್ಕಿದ ಈ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
14 : ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ. ಸೋದರನ ಸುಧಾರಣೆ
15 : “ನಿನ್ನ ಸೋದರನು ನಿನಗೆ ಅಪರಾಧ ಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.
16 : ಒಂದು ವೇಳೆ, ಅವನು ನಿನಗೆ ಕಿವಿಗೊಡದೆ ಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.
17 : ಅವರಿಗೂ ಅವನು ಕಿವಿಗೊಡದೆ ಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆ ಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕøತನೆಂದು ಪರಿಗಣಿಸು.
18 : “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಸಭಾಪ್ರಾರ್ಥನೆಯ ಪ್ರಭಾವ
19 : “ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.
20 : ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.” ಕ್ಷಮೆಗೆ ಎಲ್ಲೆ ಇಲ್ಲ
21 : ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾವಿೂ, ನನಗೆ ವಿರುದ್ಧ ದ್ರೋಹ ಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.
22 : “ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ” ಎಂದು ಯೇಸು ಉತ್ತರವಿತ್ತರು.
23 : ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.
24 : ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.
25 : ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.
26 : ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾವಿೂ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.
27 : ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿ ಬಿಟ್ಟ.
28 : “ಆದರೆ ಅದೇ ಸೇವಕ ಹೊರಗೆ ಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.
29 : ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.
30 : ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.
31 : ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.
32 : ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.
33 : ನಾನು ನಿನಗೆ ದಯೆ ತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆ ತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.
34 : ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.
35 : “ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.

Holydivine