Mathew - Chapter 2
Holy Bible

1 : ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ; ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ. ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.
2 : “ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?" ಎಂದು ವಿಚಾರಿಸಿದರು; "ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ," ಎಂದರು.
3 : ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವೂ ಗಲಿಬಿಲಿಗೊಂಡಿತು.
4 : ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆ ಸೇರಿಸಿದನು. "ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?" ಎಂದು ಅವರನ್ನು ವಿಚಾರಿಸಿದನು.
5 : ಅದಕ್ಕೆ ಅವರು "ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ:
6 : ‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು", ಎಂದು ಪ್ರವಾದಿ ಬರೆದಿದ್ದಾನೆ" ಎಂದು ಉತ್ತರವಿತ್ತರು.
7 : ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.
8 : ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, "ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು", ಎಂದು ಹೇಳಿದನು.
9 : ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.
10 : ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು.
11 : ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.
12 : ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.
13 : ಜ್ಯೋತಿಷಿಗಳು ಹೊರಟು ಹೋದಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು," ಎಂದನು.
14 : ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.
15 : ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, "ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದನು" ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.
16 : ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದು ಹಾಕಿಸಿದನು.
17 : "ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,"
18 : ಪ್ರವಾದಿ ಯೆರೆವಿೂಯನ ಈ ಪ್ರವಚನ ಅಂದು ಸತ್ಯವಾಯಿತು.
19 : ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿದ್ದ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,
20 : “ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು," ಎಂದು ತಿಳಿಸಿದನು.
21 : ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.
22 : ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.
23 : ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, "ಆತನನ್ನು ನಜರೇತಿನವನೆಂದು ಕರೆಯುವರು" ಎಂಬ ಪ್ರವಚನ ನೆರವೇರಿತು.

Holydivine