Mathew - Chapter 6
Holy Bible

1 : "ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.
2 : ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
3 : ಆದರೆ ನೀನು ದಾನಧರ್ಮ ಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.
4 : ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು."
5 : "ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.
6 : ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆ ಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು."
7 : "ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
8 : ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.
9 : ಆದುದರಿಂದ ಹೀಗೆಂದು ಪ್ರಾರ್ಥನೆ ಮಾಡಿ:
10 : "ಸ್ವರ್ಗದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.
11 : ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.
12 : ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.
13 : ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.
14 : "ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.
15 : ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು."
16 : "ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
17 : ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.
18 : ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು."
19 : "ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.
20 : ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು, ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.
21 : ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ."
22 : ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.
23 : ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!"
24 : "ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆ ಮಾಡಲು ನಿಮ್ಮಿಂದಾಗದು."
25 : "ನಾನು ಹೇಳುವುದನ್ನು ಕೇಳಿ; ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದಲ್ಲವೇ?
26 : ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕುಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೇ?
27 : ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?
28 : ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ, ನೂಲುವುದಿಲ್ಲ.
29 : ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
30 : ಅಲ್ಪ ವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?
31 : ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.
32 : ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
33 : ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.
34 : ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು."

Holydivine